ಪಾದಯಾತ್ರೆಯನ್ನು ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡುತ್ತಿದೆ : ಸಿದ್ದರಾಮಯ್ಯ ಆಕ್ರೋಶ

ರಾಮನಗರ (hairamanagara.in) : ಮೇಕೆದಾಟು ಪಾದಯಾತ್ರೆ ಬಗ್ಗೆ 2 ತಿಂಗಳ ಹಿಂದೆಯೇ ಘೋಷಣೆ ಮಾಡಿದ್ದೆವು. ಆದರೆ ಈ ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯಿಂದ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಕರ್ಫ್ಯೂವನ್ನು, ರಾಮನಗರದಲ್ಲಿ ಸೆಕ್ಷನ್ 144ನ್ನು ಹೇರಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕನಕಪುರ ತಾಲ್ಲೂಕಿನ ಸಂಗಮದಿಂದ ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಭಾನುವಾರ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದು 2 ವರ್ಷವಾಗಿದೆ. ಆದರೆ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿದೆ. ಜೊತೆಗೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಏನೂ ಮಾಡಿಲ್ಲ ಎಂದು ತಪ್ಪು ಮಾಹಿತಿ ನೀಡಿ, ಇದರಿಂದಲೇ ಮೇಕೆದಾಟು ಯೋಜನೆ ವಿಳಂಬವಾಗಿದೆ ಎಂದು ಜಾಹೀರಾತು ನೀಡುತ್ತಿದ್ದಾರೆ ಎಂದು ದೂರಿದರು.

ನಾವು ಇಂದಿನಿಂದ 10 ದಿನಗಳ ಕಾಲ ಕೈಗೊಂಡಿರುವುದು ಕಾಂಗ್ರೆಸ್ ನ ರಾಜಕೀಯ ಪ್ರೇರಿತ ಪಾದಯಾತ್ರೆ ಅಲ್ಲ, ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕಾವೇರಿ ನೀರಿಗಾಗಿ ನಡೆಸುತ್ತಿರುವ ಜಾಗೃತಿಯ ಹೋರಾಟ. ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಬಿಜೆಪಿ, ಜೆಡಿಎಸ್ ನವರೂ ಬೇಕಾದರೆ ಬರಲಿ, ಈ ಯೋಜನೆ ಜಾರಿಯಾದರೆ ಇನ್ನು 50 ವರ್ಷದವರೆಗೆ ಕುಡಿಯುವ ನೀರಿಗೆ ಸಮಸ್ಯೆ ಇರಲ್ಲ. ಇದರಿಂದಾಗಿ ಎರಡೂವರೆ ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
2008ರಿಂದ 2013ರವರೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಬಿಎಸ್ವೈ, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು. ಆಗ ಅದನ್ನು ಕೈಗೆತ್ತಿಕೊಳ್ಳಲಿಲ್ಲ, ಪ್ರಾರಂಭವನ್ನು ಮಾಡಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮೇಕೆದಾಟು ಯೋಜನೆಯನ್ನು ಕೈಗೆತ್ತುಕೊಂಡೆವು. 2013ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಸಭೆ ಮಾಡಿ ಡಿಪಿಆರ್ ತಯಾರು ಮಾಡಬೇಕು ಎಂದು ತೀರ್ಮಾನ ಮಾಡಿದೆವು. ಎಲ್ಲಾ ಪ್ರಕ್ರಿಯೆ ಮುಗಿದ ಮೇಲೆ ಡಿಪಿಆರ್ ತಯಾರು ಆಯಿತು. ಆಗಿನ ಜಲಸಂನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ರಿವೈಸ್ಡ್ ಡಿಪಿಆರ್ ಸಲ್ಲಿಸಿದ್ದಾರೆ. ನಮ್ಮ ಕಾಲದಲ್ಲಿ ಎಲ್ಲೂ ಸಹ ವಿಳಂಬವಾಗಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *