ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ
ಹಾಯ್ ರಾಮನಗರ (hairamanagara.in) 15 ಫೆಬ್ರವರಿ 2022
ರಾಮನಗರ : ಶಾಲಾಕಾಲೇಜು ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಲ್ಲಿ ಭೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ತಂಬಾಕು ಉತ್ಪನ್ನಮಾರಾಟ ಮಾಡುತ್ತಿದ್ದಲ್ಲಿ ಅಥವಾ ಸೇವಿಸುತ್ತಿದ್ದಲಿ ಅವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ ನೀಡಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತ್ರೈಮಾಸಿಕ ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.
ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಮಾಡುವುದಿಲ್ಲ ಎಂದು ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರು ಸಭೆ ನಡೆಸಿ ನಿರ್ಣಯ ಕೈಗೊಂಡು ಸುಗ್ಗನಹಳ್ಳಿ ವ್ಯಾಪ್ತಿಗೆ ಬರುವ 23 ಹಳ್ಳಿಗಳಲ್ಲಿ ತಂಬಾಕು ಮಾರಾಟ ಹಾಗೂ ಸೇವನೆ ಗಣನೀಯವಾಗಿ ಕಡಿಮೆಯಾಗಿದೆ. ಈ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ಮಾಡಿಕೊಂಡು ಎಲ್ಲಾ ಗ್ರಾಮ ಪಂಚಾಯಿತಿಗಳು ತಮ್ಮ ಗ್ರಾಮವನ್ನು ತಂಬಾಕು ಮುಕ್ತ ಮಾಡಲು ಶ್ರಮಿಸಬೇಕು ಎಂದರು.
ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯನ್ನು ತಂಬಾಕು ಮುಕ್ತ ಮಾಡಲು ಶ್ರಮಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರ ಕೆಲಸ ಶ್ಲಾಘನೀಯ ಎಂದ ಅಪರ ಜಿಲ್ಲಾಧಿಕಾರಿಗಳು ಪ್ರಶಂಸನಾ ಪತ್ರ ವಿತರಿಸಿದರು.
ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ ( ಕೋಟ್ಪಾ) ಯಡಿ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಜಿಲ್ಲೆಯಲ್ಲಿ ಜಾರಿ ಮಾಡುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವ ಸ್ಥಳಗಳಲ್ಲಿ ದಾಳಿ ನಡೆಸಿ ನಿಯಮ ಪಾಲನೆಯ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ನಿಯಮ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ದಂಡ ವಿಧಿಸುವಂತೆ ತಿಳಿಸಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪೆÇೀಸ್ಟರ್‍ಗಳು ಹಾಗೂ ಭಿತ್ತಿ ಪತ್ರಗಳ ಮೂಲಕ ಜನರಿಗೆ ಅರಿವು ಮೂಡಿಸಬೇಕು. ಶಾಲಾಕಾಲೇಜು ಮಕ್ಕಳು ತಂಬಾಕಿನಿಂದ ದೂರವಿರುವ ರೀತಿ ವಾತಾವರಣ ರಚಿಸಬೇಕು ಎಂದರು.
ತಂಬಾಕು ವ್ಯಸನಿಗಳು ವ್ಯಸನದಿಂದ ಮುಕ್ತವಾಗಲೂ ಜಿಲ್ಲಾಸ್ಪತ್ರೆಯಲ್ಲಿರುವ ತಂಬಾಕು ವ್ಯಾಸನ ಮುಕ್ತ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರವನ್ನು ವ್ಯಸನಿಗಳು ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲ ಪಂಚಾಯಿತಿಯವರು ಕೂಡ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸರ್ಕಾರೇತರ ಸಂಘ, ಸಂಸ್ಥೆಗಳು ಸಹ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲೆಯ ಸರ್ವೇಕ್ಷಾಧಿಕಾರಿ ಡಾ. ಕಿರಣ್ ಶಂಕರ್, ಅಬಕಾರಿ ಉಪನೀರಿಕ್ಷಕ ಪ್ರದೀಪ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್, ಜಿಲ್ಲಾ ಅಂಕಿತ ಅಧಿಕಾರಿ ಸುಲೋಚನ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.