ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಅರ್ಜಿ ಸಲ್ಲಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ

ಹಾಯ್ ರಾಮನಗರ (hairamanagara.in) 18 ಫೆಬ್ರವರಿ 2022

ರಾಮನಗರ : ಜಿಲ್ಲೆಯಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು, ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ತಿಳಿಸಿದರು.

ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನಕ್ಕಾಗಿ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿರುತ್ತದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರ ಅಡಿ ಪ್ರದತ್ತವಾದ ಅಧಿಕಾರದ ಅನ್ವಯ ಜಿಲ್ಲಾಧಿಕಾರಿಗಳು  ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 97(4)(3)ರಲ್ಲಿ ಜಿಲ್ಲಾಧಿಕಾರಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಜಮೀನು “ಬ” ಖರಾಬು ಎಂದು ವರ್ಗೀಕೃತವಾಗಿದ್ದಲ್ಲಿ, ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಜಿಲ್ಲಾಧಿಕಾರಿ ಅವರ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರ ಅನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮಿನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರ ಅನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ, ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿ ಅವರು ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸುವುದು.

ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ ಅಥವಾ ಜಲಮೂಲಗಳಿಂದ ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್ ಅವರಿಗೆ ದೂರು ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *