ಕಾಂಗ್ರೆಸ್‌ ಪಕ್ಷವದವರಿಗೆ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ. ಅವರ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು ಎಂಬುದು ಗೊತ್ತಿದೆ. ಈಗ ರಾಜಕೀಯ ಲಾಭಕ್ಕಾಗಿ ಸಂತೋಷ್‌ ಆತ್ಮಹತ್ಯೆ ಪ್ರಕರಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ : ಬಸವರಾಜ ಬೊಮ್ಮಾಯಿ ಆರೋಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ ಸಾವಿನ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ವರದಿ ಬಂದ ಬಳಿಕವೇ ಮುಂದಿನ ಕ್ರಮ ಜರುಗಿಸಲಾಗುವುದು. ಅಲ್ಲಿಯವರೆಗೂ ಯಾವುದೇ ಕ್ರಮವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಂತೋಷ್‌ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ವರದಿ ಬರುವವರೆಗೂ ಯಾವುದೇ ಕ್ರಮವಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದರು.

‘ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆಯೆ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷದ ವರಿಷ್ಠರು ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಆದರೆ, ಯಾವುದೇ ಸೂಚನೆ, ನಿರ್ದೇಶನ ನೀಡಿಲ್ಲ. ತನಿಖಾ ವರದಿ ಬಂದ ಬಳಿಕವೇ ಮುಂದಿನ ನಿರ್ಧಾರ’ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷವದವರಿಗೆ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ. ಅವರ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು ಎಂಬುದು ಗೊತ್ತಿದೆ. ಈಗ ರಾಜಕೀಯ ಲಾಭಕ್ಕಾಗಿ ಸಂತೋಷ್‌ ಆತ್ಮಹತ್ಯೆ ಪ್ರಕರಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭ್ರಷ್ಟಾಚಾರದ ವಿಚಾರದಲ್ಲಿ ಮಾಡಿರುವ ಆರೋಪ ಕುರಿತು ಕೇಳಿದಾಗ, ‘ಅವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಭ್ರಷ್ಟಾಚಾರ ನಡೆದಿರುವ ಬಗ್ಗೆ ದಾಖಲೆಗಳಿದ್ದರೆ ನಮಗೆ ಒದಗಿಸಲಿ, ತನಿಖೆಗೆ ಸಿದ್ಧ’ ಎಂದರು.

‘ಮುಖ್ಯಮಂತ್ರಿ ಕಚೇರಿಯಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಮುಖ್ಯಮಂತ್ರಿಯಾಗಿದ್ದಲೂ ಭ್ರಷ್ಟಾಚಾರದ ಆರೋಪಗಳು ಬಂದಿದ್ದವು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪವಿತ್ತು’ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *