ಸರ್ಕಾರಿ ಬಸ್ ನಿಲ್ದಾಣದ ಆವರಣದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ವಿವಿಧ ಕನ್ನಡಪರ ಸಂಘಟನೆಗಳ ವಿರೋಧ
ರಾಮನಗರ : ನಗರದ ಸರ್ಕಾರಿ ಬಸ್ ನಿಲ್ದಾಣದ ಆವರಣದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಉದ್ಧೇಶಿರುವ ಕ್ರಮಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಕೆಎಸ್ ಆರ್ ಟಿಸಿ ವಿಭಾಗಿಯ ನಿಯಂತ್ರಣಾಧಿಕಾರಿ ಕಿರಣ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಬಸ್ ನಿಲ್ದಾಣದ ಆವರಣದಲ್ಲಿ ಸಾರಿಗೆ ಅಧಿಕಾರಿಗಳು ವಾಣಿಜ್ಯ ಉದ್ದೇಶದಿಂದ ಮಳಿಗೆಗಳನ್ನು ನಿರ್ಮಿಸಲು ಹೊರಟಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು, ಈಗಾಗಲೇ ಕಿಷ್ಕಿಂದೆಯಂತೆ ಇರುವ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನಿಲ್ಲಲು ಜಾಗವಿಲ್ಲದಂತಹ ಪರಿಸ್ಥಿತಿ ಉದ್ಭವಿಸಲಿದೆ. ಈ ನಿಟ್ಟಿನಲ್ಲಿ ಸಾರಿಗೆ ಅಧಿಕಾರಿಗಳು ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಉದ್ದೇಶಿತ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವುದನ್ನು ಈ ಕೂಡಲೇ ಕೈ ಬಿಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ರವಿ ಒತ್ತಾಯಿಸಿದರು.
ಸಾರಿಗೆ ಇಲಾಖೆ ಕ್ರಮ ಖಂಡಿಸಿ ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯ ಮುಖ್ಯಸ್ಥರ ಗಮನಕ್ಕೂ ತರಲಾಗುವುದು ಎಂದು ಹೇಳಿದರು.
ಕರ್ನಾಟಕ ರೈತಸಂಘದ ತುಂಬೇನಹಳ್ಳಿ ಶಿವಕುಮಾರ್ ಮಾತನಾಡಿ, ಜಿಲ್ಲಾ ಕೇಂದ್ರ ರಾಮನಗರ ಬಸ್ ನಿಲ್ದಾಣದ ರಸ್ತೆ ಬದಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಕಳೆದ ವರ್ಷ ಒಕ್ಕಲೆಬ್ಬಿಸಿ, ಪೆಟ್ಟಿ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ ಸಾರಿಗೆ ಹಾಗೂ ನಗರಸಭೆ ಅಧಿಕಾರಿಗಳು, ತೆರವುಗೊಳಿಸಿದ ಜಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ತಂಗುದಾಣ ನಿರ್ಮಿಸುವುದಾಗಿ ಹೇಳಿದ್ದರು. ಇದೀಗ ತಂಗುದಾಣದ ಬದಲಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಮುಂದಾಗಿರುವುದು ಎಷ್ಟು ಸರಿ ಎಂಬುದನ್ನು ಸಾರಿಗೆ ಅಧಿಕಾರಿಗಳು ಸಾರ್ವಜನಿಕರ ಎದುರು ಬಿಚ್ಚಿಡಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಹಾಗೂ ಸ್ಥಳೀಯ ಶಾಸಕರಾದ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವಾರು ಚುನಾಯಿತ ಪ್ರತಿನಿಧಿಗಳು ಬಸ್ ನಿಲ್ದಾಣದ ಆವರಣದಲ್ಲಿ ಯಾವುದೇ ಕಾರಣಕ್ಕೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವುದು ಬೇಡ, ಜಿಲ್ಲಾ ಕೇಂದ್ರದ ಬಸ್ ನಿಲ್ದಾಣವಾದರೂ ಜಾಗ ಚಿಕ್ಕದಾಗಿರುವುದರಿಂದ ವಾಣಿಜ್ಯ ಮಳಿಗೆಗಳ ನಿರ್ಮಾಣದಿಂದ ಪ್ರಯಾಣಿಕರಿಗೆ ತೊಂದರೆ ಹಾಗೂ ಕಿರಿಕಿರಿ ಆಗಲಿದೆ ಎಂಬುದನ್ನು ಜಿಲ್ಲಾ ಸಾರಿಗೆ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದ್ದರೂ ಅದನ್ನು ಬದಿಗೊತ್ತಿ ಜಿಲ್ಲಾ ಸಾರಿಗೆ ಅಧಿಕಾರಿ ಕಿರಣ್ ಕುಮಾರ್ ಅವರು ಉದ್ಧಟತನದಿಂದ ವರ್ತಿಸುತ್ತಿರುವುದು ಖಂಡನೀಯ ಎಂದರು.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :