ದೊಡ್ಡಗಂಗವಾಡಿ ಗ್ರಾಮದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ

ರಾಮನಗರ : ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣದ ಮಹತ್ವ ತಿಳಿದು ರಾಜ್ಯದಲ್ಲಿ ಅಕ್ಷರ ಕ್ರಾಂತಿ ಮಾಡಿದರು. ಸರಳ ಸಜ್ಜನಿಕೆಯ ಅವರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ಜಾತ್ಯಾತೀತ ತತ್ವ ಮೈಗೂಡಿಸಿಕೊಂಡಿದ್ದ ಶ್ರೀಗಳು ನಿಜಕ್ಕೂ ಪವಾಡ ಪುರುಷರು. ಬಸವಣ್ಣರ ತತ್ವಾದರ್ಶ ಕಾರ್ಯರೂಪಕ್ಕೆ ತಂದ ಅಪರೂಪದ ತಪಸ್ವಿ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ದೊಡ್ಡಗಂಗವಾಡಿ ಗ್ರಾಮದಲ್ಲಿ ನಿರ್ಮಿಸಿರುವ ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಪುತ್ಥಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯು ಇಡೀ ಜೀವತಾವಧಿಯನ್ನು ಸಮಾಜಕ್ಕೆ ಮೀಸಲಿಟ್ಟರು. ಶ್ರೀಗಳು ಜಾತಿ, ಧರ್ಮ ಬೇಧ ಮರೆತು ಸಮಾಜದ ಎಲ್ಲರಿಗೂ ವಿದ್ಯೆ ನೀಡಿದರು. ಅನ್ನ, ವಸತಿ, ಶಿಕ್ಷಣಕ್ಕೆ ಒತ್ತು ಕೊಟ್ಟು ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದರು ಎಂದು ತಿಳಿಸಿದರು.

ತ್ರಿವಿಧ ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಭಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ ಎಂದು ಅವರು ಹೇಳಿದರು.

ಶಿವಕುಮಾರ ಸ್ವಾಮೀಜಿಯು 7 ದಶಕಕ್ಕೂ ಹೆಚ್ಚು ಕಾಲ ಸಮಾಜದಲ್ಲಿ ಬಡವರು, ದೀನ ದಲಿತರಿಗೆ ಅಕ್ಷರ, ಆಶ್ರಯ, ಅನ್ನ ನೀಡಿದರು. 12ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ನಡೆದ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿ, ದಾಸೋಹದ ವೈಭವವನ್ನು ಸಿದ್ಧಗಂಗಾ ಮಠದಲ್ಲಿ ಮತ್ತೆ ನೋಡುವ ಭಾಗ್ಯ ಕರುಣಿಸಿದರು. ಸ್ವಾಮೀಜಿ ದಾರ್ಶನಿಕರು ಎಂದು ತಿಳಿಸಿದರು.

ಬೇವೂರು ಮಠದ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಶಿವಕುಮಾರ ಸ್ವಾಮೀಜಿ ಅವರು ಧರ್ಮ, ಜಾತಿ, ವರ್ಣ ಭೇದವಿಲ್ಲದೆ ಲಕ್ಷಾಂತರ ಮಂದಿಗೆ ಶಿಕ್ಷಣ ನೀಡುವ ಮೂಲಕ ಜ್ಞಾನದ ಬೆಳಕು ತೋರಿದರು. ಕೊನೆಯ ಉಸಿರಿರುವವರೆಗೂ ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡುಪಾಗಿಟ್ಟ ಅವರು ಮಹಾನ್‌ ಮಾನವತಾವಾದಿ. ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದ ಬಹುತೇಕ ಮಂದಿ ಉನ್ನತ ಸ್ಥಾನಗಳಲಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ದೊಡ್ಡಗಂಗವಾಡಿ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :

https://chat.whatsapp.com/IY8d8seeQSCIZewIP8uKdh

‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :

https://www.facebook.com/HaiRamanagara?mibextid=ZbWKwL

ಟ್ವಿಟರ್ : http://twitter.com/hairamanagara

Leave a Reply

Your email address will not be published. Required fields are marked *